ಬೆಳಗಾವಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ.

ಗುಜನಟ್ಟಿ ಗ್ರಾಮದ ನಿವಾಸಿ ರಮೇಶ ಹಣಮಂತ ಬಂಟ್ರೋಳಿ ಮೃತಪಟ್ಟ ವ್ಯಕ್ತಿಯಾಗಿದ್ದು, ಕಲ್ಲೋಳಿ ಗ್ರಾಮದ ಬನಪ್ಪ ರಾಮಚಂದ್ರ ವಡೇರ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರಮೇಶ ಹಾಗೂ ಆರೋಪಿಯ ಪತ್ನಿ ಲಕ್ಷ್ಮೀ ನಡುವೆ ಅನೈತಿಕ ಸಂಬಂಧವಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಇಬ್ಬರು ಒಟ್ಟಿಗಿರುವ ಫೋಟೋವನ್ನು ರಮೇಶ ವಾಟ್ಸ್ಆ್ಯಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಬನಪ್ಪ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಸೋಮವಾರ ಗ್ರಾಮದ ಹೊರವಲಯದ ಜಮೀನಿನಲ್ಲಿ ರಮೇಶನ ಮೇಲೆ ಕುಡುಗೋಲಿನಿಂದ ದಾಳಿ ನಡೆದಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *