ಬೆಳಗಾವಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶ್ಲಾಘಿಸಿದರು.
ಬುಧವಾರ ಸಂಜೆ ಮಹಾನಗರ ಪಾಲಿಕೆಯ ಚುನಾವಣಾ ಶಾಖೆಗೆ ಆಕಸ್ಮಿಕವಾಗಿ ಭೇಟಿ ನೀಡಿದ ಅವರು, ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಎಸ್‌ಐಆರ್ ಕಾರ್ಯ ಮತ್ತು ಗಣಕೀಕರಣದ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ನಿಖರವಾಗಿ ಹಾಗೂ ಸಮಯೋಚಿತವಾಗಿ ಪೂರ್ಣಗೊಳಿಸಲು ಸಿಬ್ಬಂದಿ ತೋರಿಸುತ್ತಿರುವ ಬದ್ಧತೆಯನ್ನು ಅವರು ಮೆಚ್ಚಿದರು.
ಈ ವೇಳೆ ಮಾತನಾಡುವ ತೊಂದರೆ ಇದ್ದರೂ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವಿಶಾಲ ಮಾವಿನಕಟ್ಟಿ ಅವರ ಸೇವೆಯನ್ನು ಜಿಲ್ಲಾಧಿಕಾರಿಗಳು ವಿಶೇಷವಾಗಿ ಪ್ರಶಂಸಿಸಿ, ಅವರ ಕಾರ್ಯನಿಷ್ಠೆ ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.
ಪಾಲಿಕೆ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಸಮರ್ಪಕ ಮಾರ್ಗದರ್ಶನ, ಉತ್ತಮ ಸಮನ್ವಯ ಮತ್ತು ಸಿಬ್ಬಂದಿಯ ತಂಡದ ಕೆಲಸದಿಂದ ಎಸ್‌ಐಆರ್ ಕಾರ್ಯ ಯಶಸ್ವಿಯಾಗಿ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.
ನಂತರ ಪಾಲಿಕೆ ಆವರಣದಲ್ಲಿರುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಭೇಟಿ ನೀಡಿ, ಉದ್ಯಾನದ ಸ್ವಚ್ಛತೆ ಹಾಗೂ ನಿರ್ವಹಣೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಡಾ. ಸಿದ್ದು ಹುಲ್ಲೋಳಿ ಅವರು ಎಸ್‌ಐಆರ್ ಕಾರ್ಯದ ಪ್ರಗತಿ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಭೇಟಿಯ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ಉಪಸ್ಥಿತರಿದ್ದರು.
