ಬೆಂಗಳೂರು/ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಕುಟುಂಬಕ್ಕೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾದ ವಿವಿಧ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ.
ಒಟ್ಟು 21 ಸ್ಥಳಗಳಲ್ಲಿ ಪರಿಶೀಲನೆ ನಡೆದಿದ್ದು, ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇದರ ಜೊತೆಗೆ ಸಚಿವರ ಆಪ್ತರು ಹಾಗೂ ವೈ. ಮಂಜುನಾಥ್ ಸೇರಿದಂತೆ ಕೆಲವರ ನಿವಾಸ ಮತ್ತು ಕಚೇರಿಗಳಲ್ಲಿಯೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ವಿದೇಶಿ ಹೂಡಿಕೆ ಮತ್ತು ಗಡಿಯಾಚೆಗಿನ ಹಣಕಾಸು ವಹಿವಾಟುಗಳ ಕುರಿತು ತನಿಖೆ ನಡೆಸುತ್ತಿರುವ ಇಡಿ, ಕಾಂಗೋದಲ್ಲಿರುವ ಗಣಿಗಾರಿಕೆ ಸಂಸ್ಥೆಯೊಂದರಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಶೇ.40ರಷ್ಟು ಪಾಲು ಇರುವುದಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿಸಿದೆ.
ಶೋಧ ಕಾರ್ಯಾಚರಣೆ ವೇಳೆ ವಿದೇಶಿ ಸಂಸ್ಥೆಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ವಿವಿಧ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಅಲ್ಲದೆ, ಲೆಕ್ಕಕ್ಕೆ ತೋರಿಸದ ಸುಮಾರು ₹3.3 ಕೋಟಿ ನಗದು ಹಾಗೂ ಸುಮಾರು ₹15 ಲಕ್ಷ ಮೌಲ್ಯದ ಡಾಲರ್, ಯುರೋ ಸೇರಿದಂತೆ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಜಪ್ತಿ ಮಾಡಲಾಗಿದೆ ಎಂದು ಇಡಿ ಹೇಳಿದೆ.
ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಹಾಗೂ ಗುತ್ತಿಗೆದಾರರಿಂದ ಲಂಚ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ವಿದೇಶಿ ಹೂಡಿಕೆ, ಗಡಿಯಾಚೆಗಿನ ಹಣಕಾಸು ವ್ಯವಹಾರಗಳು ಹಾಗೂ ಇತರೆ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ ಎಂದು ಇಡಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಸೂಚನೆ: ಮೇಲಿನ ಆರೋಪಗಳು ತನಿಖಾ ಸಂಸ್ಥೆಯ ಹೇಳಿಕೆಗಳ ಆಧಾರಿತವಾಗಿದ್ದು, ಪ್ರಕರಣದ ಅಂತಿಮ ಸತ್ಯಾಸತ್ಯತೆ ತನಿಖೆ ಮತ್ತು ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ನಿರ್ಧಾರವಾಗಲಿದೆ.
