ರಾಯಬಾಗ: ನಾಗರ ಪಂಚಮಿ ಹಬ್ಬದ ಸಂಭ್ರಮದ ನಡುವೆಯೇ ರಾಯಬಾಗ ಪಟ್ಟಣದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಿಷಕಾರಿ ಹಾವು ಕಡಿತದಿಂದ ಮೃತಪಟ್ಟಿದ್ದಾರೆ.

ಮೃತರನ್ನು ರಾಯಬಾಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43) ಎಂದು ಗುರುತಿಸಲಾಗಿದೆ.

ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ನೆರವಾಗುವ ಉದ್ದೇಶದಿಂದ ಸತ್ಯವ್ವ ಅವರು ಎಂದಿನಂತೆ ಸೋಮವಾರ ಹೊಲದಲ್ಲಿ ಕಸ ತೆಗೆಯುವ ಕೆಲಸಕ್ಕೆ ತೆರಳಿದ್ದರು. ಕೆಲಸ ನಿರ್ವಹಿಸುತ್ತಿದ್ದ ವೇಳೆ ಹೊಲದಲ್ಲಿ ಅಡಗಿದ್ದ ವಿಷಕಾರಿ ಹಾವು ಏಕಾಏಕಿ ಅವರಿಗೆ ಕಚ್ಚಿದೆ ಎನ್ನಲಾಗಿದೆ.

ಹಾವು ಕಡಿದ ಬಳಿಕ ಸತ್ಯವ್ವ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬಕ್ಕೆ ಆಧಾರವಾಗಿದ್ದ ಸತ್ಯವ್ವ ಅವರ ಅಕಾಲಿಕ ನಿಧನದಿಂದ ಮಕ್ಕಳ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ನಾಗರ ಪಂಚಮಿ ಹಬ್ಬದ ದಿನವೇ ಕುಟುಂಬದಲ್ಲಿ ದುಃಖದ ವಾತಾವರಣ ಆವರಿಸಿದೆ.

ಘಟನೆ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *