ಬೆಳಗಾವಿ: ಸಾರ್ವಜನಿಕರ ಹಿತಾಸಕ್ತಿ ಹಾಗೂ ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡುವುದರ ಜೊತೆಗೆ ಬೀದಿ ಬದಿ ವ್ಯಾಪಾರಿಗಳ ಹಿತವನ್ನೂ ಕಾಪಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಪಾಲಿಕೆಯೊಂದಿಗೆ ಸಹಕಾರ ಹಾಗೂ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು ಎಂದು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ್ ಹೇಳಿದರು.

ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿಡುವ ಕುರಿತು ಸರ್ವೋಚ್ಚ ನ್ಯಾಯಾಲಯದ ಆದೇಶವಿದೆ. ಹೀಗಾಗಿ ಕಾನೂನು ಮತ್ತು ನಿಯಮಗಳನ್ನು ಪಾಲಿಸುವುದರ ಜತೆಗೆ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ಹಿತಾಸಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರ ಸೇವಕರು, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ವ್ಯಾಪಾರಿಗಳು ಸಹಕಾರದಿಂದ ನಡೆದುಕೊಂಡು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಸೂಕ್ತ ರೀತಿಯಲ್ಲಿ ಪಾಲಿಕೆಯ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಮೇಯರ್ ತಿಳಿಸಿದರು.

ಉಪಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳು ನಿಯಮಗಳನ್ನು ಪಾಲಿಸಿ ಪಾಲಿಕೆಗೆ ಸಹಕಾರ ನೀಡುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಮತ್ತು ಪಾಲಿಕೆಯ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಬೀದಿ ಬದಿ ವ್ಯಾಪಾರಕ್ಕೆ ಶೀಘ್ರ ಸೂಕ್ತ ಸ್ಥಳ ನಿರ್ಧಾರ: ಆಯುಕ್ತ ಕಾರ್ತಿಕ್ ಎಂ.

ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಮಾತನಾಡಿ, ಬೀದಿ ಬದಿ ವ್ಯಾಪಾರಕ್ಕೆ ಸೂಕ್ತ ಸ್ಥಳಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಸ್ಥಳಗಳ ಸಾಧಕ-ಬಾಧಕಗಳನ್ನು ಚರ್ಚಿಸಿ, ಸಂಬಂಧಪಟ್ಟ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಟ್ಟಣ ಮಾರಾಟ ಸಮಿತಿ ಸದಸ್ಯರು ಬೀದಿ ಬದಿ ವ್ಯಾಪಾರಿಗಳಿಗೆ ಎದುರಾಗುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ತಮ್ಮ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಮೇಶ ಮೈಲುಗೋಳ, ರಾಜು ಭಾತಕಾಂಡೆ, ಶ್ರೇಯಸ್ ನಾಕಾಡಿ, ನಗರ ಸೇವಕರಾದ ಸವಿತಾ ಕಾಂಬಳೆ, ಗಿರೀಶ ಧೋಂಗಡಿ, ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಿಕರ್, ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ಟಿ.ಬಿ., ನಗರ ಯೋಜನಾಧಿಕಾರಿ ವಾಹಿದ್ ಅಖ್ತರ್, ಅಭಿಯಂತರ ಅನೂಪ, ಸಿಎಓ ಗೀತಾ ಹಾಗೂ ಪಟ್ಟಣ ಮಾರಾಟ ಸಮಿತಿ ಪದಾಧಿಕಾರಿಗಳಾದ ಶ್ರೀಪಾದ್ ಹೋಳ್ಕರ್, ಮೊಹಮ್ಮದ್ ಅಲಿ ಭಾಗವಾನ್, ವಿಜಯ ಚೌಹಾನ್, ಚಂದ್ರವ್ವ ದೇಸೂರಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *